Times of Deenabandhu
  • Home
  • ಜಿಲ್ಲೆ
  • ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಜಿಲ್ಲೆ ಶಿವಮೊಗ್ಗ

ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಶಿವಮೊಗ್ಗ: ದೆಹಲಿಯ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಎಬಿವಿಪಿ ಗೂಂಡಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸಿ ಜಿಲ್ಲಾ ಎನ್‌ಎಸ್‌ಯುಐ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆದು ಅಪರ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ದೆಹಲಿಯ ಜೆಎನ್‌ಯುನಲ್ಲಿ ನಿನ್ನೆ ಸಂಜೆ ವಿದ್ಯಾರ್ಥಿ ಸಂಘದ ಮುಖಂಡರು ಸೇರಿದಂತೆ ವಿದ್ಯಾರ್ಥಿಗಳು, ಪ್ರಾಧ್ಯಾಪಕರ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿರುವ ಎಬಿವಿಪಿ ಗೂಂಡಾಗಳನ್ನು ಬಂಧಿಸಿ ಕಠಿಣ ಕ್ರಮ ಜರುಗಿಸುವಂತೆ ಕಾರ್ಯಕರ್ತರು ಆಗ್ರಹಿಸಿದರು.
ಹಾಸ್ಟೆಲ್ ಶುಲ್ಕ ಹೆಚ್ಚಳ, ಪೌರತ್ವ (ತಿದ್ದುಪಡಿ) ಕಾಯ್ದೆ, ರಾಷ್ಟ್ರೀಯ ಪೌರತ್ವ ನೊಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೊಂದಣಿ ವಿಚಾರಗಳನ್ನು ವಿರೋಧಿಸಿ ಜೆ.ಎನ್.ಯು.ನಲ್ಲಿ ಕಳೆದೆರಡು ತಿಂಗಳಿನಿಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನೇ ಗುರಿಯಾಗಿಟ್ಟುಕೊಂಡು ನಿನ್ನೆ ರಾತ್ರಿ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರೆನ್ನದೇ ಮನಸೋ ಇಚ್ಛೆ ಹಲ್ಲೆ ನಡೆಸಿರುವುದನ್ನು ತೀವ್ರವಾಗಿ ಖಂಡಿಸಿದರು.
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಎಬಿವಿಪಿ ಸಂಘಟನೆಯ ಮುಖಂಡರು, ಕಾರ್ಯಕರ್ತರು, ಗೂಂಡಾಗಳಂತೆ ವರ್ತಿಸುತ್ತಿದ್ದಾರೆ. ಇವರಿಗೆ ಬಿಜೆಪಿ ಮತ್ತು ಸಂಘ ಪರಿವಾರದವರ ಬೆಂಬಲವೂ ಇದೆ. ದೇಶದ ಪ್ರತಿಷ್ಠಿತ ವಿದ್ಯಾ ಕೇಂದ್ರವಾದ ಜೆಎನ್‌ಯುನಲ್ಲಿ ವಿದ್ಯಾರ್ಥಿಗಳಿಗೆ ರಕ್ಷಣೆ ಇಲ್ಲದಂತಾಗಿದೆ. ನಿನ್ನೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ, ವಿವಿ ಆವರಣದಲ್ಲಿ ಆತಂಕ ಸೃಷ್ಟಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಘಟನೆಯಲ್ಲಿ ತೀವ್ರ ಗಾಯಗೊಂಡಿರುವ ಜೆಎನ್‌ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷೆ ಆಯಿಷಿ ಘೋಷ್ ಮತ್ತಿತರರಿಗೆ ಸೂಕ್ತ ಚಿಕಿತ್ಸೆ ನೀಡಿ ರಕ್ಷಣೆ ಒದಗಿಸಬೇಕು. ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು. ಕೂಡಲೇ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ, ಪ್ರತಿಭಟನಾನಿರತರ ಮೇಲೆ ನಡೆಯುತ್ತಿರುವ ಹಲ್ಲೆಗಳನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಕೆ.ಚೇತನ್, ಜಿಲ್ಲಾಧ್ಯಕ್ಷ ಬಾಲಾಜಿ, ವಿನಯ್, ವಿಜಯ್, ರವಿ, ಪ್ರದೀಪ, ರಘು, ನಿತೀನ್ ರವಿ ಆಲ್ವಿನ್, ವಿನ್ಯಾಸ್, ಚಂದ್ರೋಜಿ ರಾವ್, ಅಬ್ದುಲ್ಲ, ಆಕಾಶ, ಸಂದೀಪ, ದರ್ಶನ್, ಹೇಮಂತ್ ಇನ್ನಿತರರು ಭಾಗವಹಿಸಿದ್ದರು.

Related posts

ತಾ.ಪಂ. ಅಧ್ಯಕ್ಷರಿಂದ ಜನಸಂಪರ್ಕ ಸಭೆಯ ಪೂರ್ವಭಾವಿ ಸಭೆ

Times fo Deenabandhu

ಅಂಬಿಗರ ಚೌಡಯ್ಯ ಬಂಡಾಯದ ಶರಣರ ನಾಯಕ

Times fo Deenabandhu

ಶಿವಮೊಗ್ಗ ಮೆಡಿಕಲ್ ಕಾಲೇಜು ಸೌಲಭ್ಯಗಳನ್ನು ಉತ್ತಮಪಡಿಸಲು ಕ್ರಮ: ಸಂಸದ ಬಿ.ವೈ.ರಾಘವೇಂದ್ರ

Times fo Deenabandhu